ಬೆಂಗಳೂರು:2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಕೈಜೋಡಿಸುವುದನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ.
ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುವುದಾಗಿ ಹೇಳಿರುವ ಯಡಿಯೂರಪ್ಪ, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.
ದೆಹಲಿ ನಾಯಕರು, ಅಮಿತ್ ಶಾ (ಕೇಂದ್ರ ಗೃಹ ಸಚಿವರು) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ನಿರ್ಧರಿಸುತ್ತಾರೆ. ಇಲ್ಲಿಯವರೆಗೆ ನನಗೆ ಅದರ ಬಗ್ಗೆ ಯಾವುದೇ ವಿಶೇಷ ಮಾಹಿತಿ ಇಲ್ಲ, “ಎಂದು ಅವರು ಬಿಜೆಪಿ-ಜೆಡಿ (ಎಸ್) ಮೈತ್ರಿ ಕುರಿತ ಪ್ರಶ್ನೆಗೆ ಉತ್ತರವಾಗಿ ಸುದ್ದಿಗಾರರಿಗೆ ತಿಳಿಸಿದರು.
ಮುಂದಿನ ಮಾತುಕತೆ ದೆಹಲಿ ಮಟ್ಟದಲ್ಲಿ ನಡೆಯಲಿದೆ ಮತ್ತು ಎಲ್ಲಾ ಸಾಧಕ-ಬಾಧಕಗಳನ್ನು ಪರಿಗಣಿಸಿದ ನಂತರ ಎರಡೂ ಪಕ್ಷಗಳ ನಾಯಕರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.
ಈ ಮಧ್ಯೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕುರಿತು ಚರ್ಚೆಗಳು ಇನ್ನೂ ಆರಂಭಿಕ ಹಂತದಲ್ಲಿವೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.